ಕಮಲ ಪಕ್ಷಕ್ಕೆ ಕೈ ನಾಯಕರ ವಲಸೆಯ ಮತ್ತೊಂದು ಪರ್ವ ಕರಾವಳಿಯಲ್ಲಿ ಆರಂಭವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಈ ಪಕ್ಷಾಂತರ ಪರ್ವ ಮಹತ್ವ ಪಡೆದುಕೊಂಡಿದೆ.
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ದಿಗ್ಗಜರಾದ ಮಾಜಿ ಸಚಿವ ರಮಾನಾಥ ರೈ ಅವರ ಕ್ಷೇತ್ರದ ಪ್ರಭಾವಿ ಮುಖಂಡರಾಗಿದ್ದ ಮಾಧವ ಮಾವೆ ತನ್ನ ಪತ್ನಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ತನ್ನ ಬೆಂಬಲಿಗರೊಂದಿಗೆ ಕಮಲ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಕಳೆದ ನಗರ ಪಾಲಿಕೆ ಚುನಾವಣೆಯಲ್ಲಿ ಹಲವು ಸ್ಥಳೀಯ ನಾಯಕರು ಸಾಮೂಹಿಕವಾಗಿ ಬಿಜೆಪಿ ತೆಕ್ಕೆಗೆ ಜಾರಿದ್ದರು. ಇದಾದ ಬಳಿಕ, ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಕಡೆ ವಾಲಿರುವುದು ಇದೇ.
ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.