ಕೆಲಸಕ್ಕೆ ಸೇರ್ಪಡೆಗೊಂಡ ಒಂದೇ ದಿನಕ್ಕೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸ್: ಅತ್ಯಾಚಾರದ ದೂರು

ಲಖನೌ: ಕೆಲಸಕ್ಕೆ ಸೇರ್ಪಡೆಗೊಂಡ ಒಂದೇ ದಿನಕ್ಕೇ ಆತ್ಮಹತ್ಯೆ  ಮಾಡಿಕೊಂಡ ಸ್ಥಿತಿಯಲ್ಲಿ ನರ್ಸ್ ಓರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವ್​ನಲ್ಲಿ ನಡೆದಿದೆ. 

ಮೃತಪಟ್ಟ ಯುವತಿ ಶುಕ್ರವಾರವಷ್ಟೇ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್​ ಆಗಿ ಕೆಲಸಕ್ಕೆ ಸೇರಿದ್ದಳು. ಆದರೆ ಅದರ ಮಾರನೇ ದಿನವೇ ಅದೇ ಆಸ್ಪತ್ರೆಯ ಕಟ್ಟಡದಲ್ಲಿ ಆಕೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಕೆಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ‌. ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಮೂವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿ ಶಶಿ ಶೇಖರ್​ ಸಿಂಗ್​ ತಿಳಿಸಿದ್ದಾರೆ.