ಸುಳ್ಯ: ಬಿಜೆಪಿ ಯುವ ಮುಖಂಡನ ಭೀಕರ ಹತ್ಯೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಬಿಜೆಪಿ ಯುವ ಮುಖಂಡ.

ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಅಕ್ಷಯ ಎಂಬ ಕೋಳಿ ಫಾರ್ಮ್ ಹೊಂದಿದ್ದರು. ಅವರು ರಾತ್ರಿ ವೇಳೆ ಫಾರ್ಮ್ ಅನ್ನು ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಬೈಕ್‌ನಲ್ಲಿ ಆಗಮಿಸಿದ ದುಷ್ಕರ್ಮಿಗಳಿಬ್ಬರು ಪ್ರವೀಣ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ‌.

ಗಂಭೀರವಾಗಿ ಗಾಯಗೊಂಡ ಪ್ರವೀಣ್ ನೆಟ್ಟಾರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ದಾರಿಮಧ್ಯೆಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ‌‌. ಇದೀಗ ಬೆಳ್ಳಾರೆ ಪೇಟೆ ಸಹಿತ ಸುತ್ತಮುತ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.