ಮಂಗಳೂರು: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣ ಮೂವರು ಆರೋಪಿಗಳ ಬಂಧನ



ಮಂಗಳೂರು: ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು.

ಈ ಮೂವರನ್ನು ನಿನ್ನೆ ರಾತ್ರಿ ಕಾಪುವಿನ ಲಾಡ್ಜ್ ನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ‌. ಕೊಲೆ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ ವಿವಿಧ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದವರು.‌ ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದನು. ಸವಿನ್ ಕಾಂಚನ್ ಮುಲ್ಕಿ ಹಾಗೂ ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಆರೋಪಿಗಳಲ್ಲಿ ಓರ್ವನು 2021ರಲ್ಲಿ ನಡೆದ ಪಿಂಕಿ ನವಾಝ್ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಲ್ಲಿ ಇಬ್ಬರು ಜಲೀಲ್ ರನ್ನು ಫ್ಯಾನ್ಸಿ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದು ಕೊಲೆಗೈದಿದ್ದರು. ಮತ್ತೊಬ್ಬನು ಕೊಲೆ ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬೈಕ್ ನಲ್ಲಿ ಎಸ್ಕೇಪ್ ಅಗಲು ಸಹಕರಿಸಿದವನು.‌ ಮಂಗಳೂರು ಪೊಲೀಸ್ ತನಿಖಾ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ದಸ್ತಗಿರಿ ಮಾಡಿದೆ. ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಬಳಿಕ ಮುಂದಿನ ತನಿಖೆಗೆ 14 ದಿನಗಳ ಕಾಲ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.