ಸುಳ್ಯ ಸಂಪಾಜೆಯಲ್ಲಿ ಬಸ್ಸು ಹಾಗೂ ಕಾರು ನಡುವೆ ಭೀಕರ ಅಪಘಾತ- 6 ಮಂದಿ ಸಾವು


ಸುಳ್ಯ ಸಮೀಪದ ಸಂಪಾಜೆ ಬಳಿ ಬಸ್ಸು ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ  ಅಪಘಾತ ನಡೆದಿದೆ.  ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕಾರು ಮಡಿಕೇರಿಯಿಂದ ಮಂಗಳೂರು ಕಡೆಗೆ ಹಾಗೂ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.