ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲ ಕಿನಾರೆಗೆ ವಿಹಾಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆದಿರುವ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಹಿಂದೂ ಸಂಘಟನೆ ಐವರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲದ ಸಚಿನ್, ತಲಪಾಡಿ ನಿವಾಸಿಗಳಾದ ಅಖಿಲ್, ಸುಹಾನ್, ಮತ್ತೋರ್ವ ಅಪ್ರಾಪ್ತ ಸೇರಿದಂತೆ ಐವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ಚೆರ್ಕಳದ ಜಾಫರ್ ಶರೀಫ್, ಮಂಜೇಶ್ವರ ಮೂಲದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು.
ಮಂಗಳೂರಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳು ತಮ್ಮ ಮೂವರು ಹಿಂದೂ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಕಡಲ ಕಿನಾರೆಗೆ ವಿಹಾರಕ್ಕೆಂದು ಜೂ.1ರ ಸಂಜೆ ವೇಳೆಗೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಿಳಿದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತ್ತು. ಪರಿಣಾಮ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಗಾಯಗೊಂಡ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.