ನವದೆಹಲಿ: ವಸತಿ ಸಮುಚ್ಚಯವೊಂದರ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ತಿಂಗಳ ಹಸುಗೂಸು ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯ ಶಹದಾರ ಪ್ರದೇಶದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 5:22ರ ಸುಮಾರಿಗೆ ಘಟನೆ ನಡೆದಿದೆ. ಪರಿಣಾಮ ಈ ನಾಲ್ವರು ಮಂದಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್, ವಸತಿ ಸಮುಚ್ಚಯ ಒಂದರ ನೆಲಮಹಡಿಯಲ್ಲಿ ಇರಿಸಲಾಗಿದ್ದ ವೈಪರ್ ಹಾಗೂ ರಬ್ಬರ್ ಕಟ್ ಮಾಡುವ ಮೆಷಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಐದು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ.
ಘಟನೆಯಲ್ಲಿ 9 ತಿಂಗಳ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಲ್ಕು ಅಂತಸ್ತಿನ ಕಟ್ಟಡದ ನಿರ್ಮಾಣದ ವೇಳೆ ಯಾವುದೇ ಮುಂಜಾಗ್ರತ ಕ್ರಮ ಪಾಲಿಸದೆ ಇರುವುದು ಗಮನಕ್ಕೆ ಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ. ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದ್ದಾರೆ.