ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದೇನೆ - ಜಗದೀಶ್ ಶೆಟ್ಟರ್
Thursday, January 25, 2024
ಬೆಂಗಳೂರು: ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭ ಟಿಕೆಟ್ ಕೈತಪ್ಪಿದಕ್ಕೆ ಅಸಮಾಧಾನಗೊಂಡು ಕಮಲ ತೊರೆದು ಕೈಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುರುವಾರ ಮತ್ತೆ ಮಾತೃಪಕ್ಷಕ್ಕೆ ಮರಳಿದ್ದಾರೆ. ಈ ವೇಳೆ ಅವರು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಆಶಿಸಿದ್ದಾರೆ.
ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಪಕ್ಷ ನನಗೆ ಹಲವು ಜವಾಬ್ದಾರಿಗಳನ್ನು ನೀಡಿತ್ತು. ಆದರೆ ಕಾರಣಾಂತರಗಳಿಂದ ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೆ. ಆದರೆ ಕಳೆದ 8-9 ತಿಂಗಳಿನಿಂದ ಹಲವು ಚರ್ಚೆಗಳು ನಡೆದಿದೆ. ಈ ವೇಳೆ ಮರಳಿ ಪಕ್ಷಕ್ಕೆ ಸೇರುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದರು. ನಾನು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಬಯಸಿದ್ದರು. ಆದ್ದರಿಂದ ಮತ್ತೆ ನಾನು ಬಿಜೆಪಿ ಸೇರಿದ್ದೇನೆ.
ನರೇಂದ್ರ ಮೋದಿಯವರು ಪ್ರಧಾನಿಯಾಗಿ ದೇಶದ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿದ್ದೇನೆ ಎಂದು ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬಳಿಕ ಹೇಳಿದ್ದಾರೆ.