ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ವಾರಂಟ್ ಅಸಾಮಿಗಳು ಸಿಸಿಬಿ ಬಲೆಗೆ
Thursday, February 22, 2024
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಮಂಜನಾಡಿಯ ಕಲ್ಕಟ್ಟದ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(26), ಬಂಟ್ವಾಳ ತಾಲೂಕಿನ ನರಿಗಾನದ ತೌಡುಗೋಳಿ ಕ್ರಾಸ್ ನಿವಾಸಿ ಮೊಯಿದ್ದೀನ್ ಹಫೀಸ್(47) ಬಂಧಿತ ಆರೋಪಿಗಳು.
ಆರೋಪಿ ಮೊಹಮ್ಮದ್ ಅಬ್ದುಲ್ ಫಯಾನ್ ಮೇಲೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 23 ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ಆ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ಮೇಲೆ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿ ಮೊಯಿದ್ದೀನ್ ಹಫೀಸ್ ಮಾದಕ ವಸ್ತು ಮಾರಾಟ/ಸಾಗಾಟದ ಮಾಡುತ್ತಿದ್ದ ಎಂದು ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 10 ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ಈತನೂ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಕುಖ್ಯಾತ ಡ್ರಗ್ಸ್ ಪೆಡ್ಲರ್ ನನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.