ಬೆಳ್ತಂಗಡಿ: ಪಿಕ್ಅಪ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ವಾಣಿ ಕಾಲೇಜು ಸಮೀಪ ಸೋಮವಾರ ಮಧ್ಯಾಹ್ನ ನಡೆದಿದೆ. ಹಿಟ್ ಆ್ಯಂಡ್ ರನ್ ದೃಶ್ಯ ಸ್ಥಳದಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ಪುರುಷೋತ್ತಮ(18) ಮೃತಪಟ್ಟ ಯುವಕ. ರಾಘವೇಂದ್ರ ನಗರ ನಿವಾಸಿ ತೌಫಿಕ್ (18) ಗಂಭೀರವಾಗಿ ಗಾಯಗೊಂಡವರು.
ದ್ವಿಚಕ್ರ ವಾಹನದಲ್ಲಿ ಇಬ್ಬರು ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನ ಢಿಕ್ಕಿ ಹೊಡೆದು ಸ್ಥಳದಿಂದ ಪರಾಗಿಯಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.