ಕೊಲ್ಲೂರು ದೇವಳದಿಂದ ಮರಳುತ್ತಿದ್ದ ಕಾರು ಕುಂದಾಪುರದಲ್ಲಿ ಭೀಕರ ಅಪಘಾತ : ಓರ್ವ ಸಾವು, ಮತ್ತಿಬ್ಬರು ಗಂಭೀರ


ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಮರಳುತ್ತಿದ್ದ ಕಾರೊಂದು ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ಮರಳಿ ಪಾಂಡಿಚೇರಿಗೆ ಮರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಢಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್‌ಗಳಿಗೂ ಹಾನಿಯಾಗಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವಘಡ ನಡೆದ ವೇಳೆ ಅದೃಷ್ಟವಶಾತ್‌ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ಸುಗಮವಾಗಲು ಅನುವು ಮಾಡಿಕೊಟ್ಟರು. ರಕ್ಷಣ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾದರು.
BREAKING NEWS
Loading latest news...
Join our WhatsApp Channel Powered By : Online Pudu