ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: ಮತ್ತೊಂದು ಅತ್ಯಾಚಾರ ಕೇಸ್ ದಾಖಲು -more-trouble-for-prajwal-revanna-another-rape-case-registered-against-him
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆಯೇ ಎದುರಾಗುತ್ತಿದೆ. ಪ್ರಜ್ವಲ್ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ಈ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ.
ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಂತರ ಸ್ಥಳ ಮಹಜರು ಕೂಡ ಮಾಡಲಾಗಿದೆ. ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಪಾಟ್ ಮಹಜರ್ ಮಾಡಲಾಗಿದೆ. ಸಂತ್ರಸ್ತೆ ಗನ್ನಿಕಡದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆದೊಂದು ಬಂಧಿಸುವ ವಿಚಾರವಾಗಿ ವಿಶೇಷ ತನಿಖಾ ತಂಡ ಕಾರ್ಯ ಪ್ರವೃತ್ತವಾಗಿದೆ. ಕಿಡ್ನಾಪ್ ಪ್ರಕರಣದ ಆರೋಪಿ, ಮಾಜಿ ಸಚಿವ ಹೆಚ್ ಡಿ ರೇವಣ್ಣ ನ್ಯಾಯಾಂಗ ಬಂಧನ ಮುಂದುವರಿದಿದ್ದು, ಜಾಮೀನು ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ.