ಆನೆಕಲ್ ಅಪಾರ್ಟ್‌ಮೆಂಟ್‌ನಲ್ಲಿ 3ಕೋಟಿ ರೂ. ಮೌಲ್ಯದ ಗಾಂಜಾ ಸೀಝ್
ಬೆಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬರೋಬ್ಬರಿ 3ಕೋಟಿ ರೂ. ಮೌಲ್ಯದ 100 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿ ನಡೆದಿದೆ.
ಇಷ್ಟೊಂದು ಬೃಹತ್ ಮಟ್ಟದಲ್ಲಿ ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್ ಎಂಬಾತನನ್ನು ಆನೇಕಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಾದ ರಾಶಿ, ಸಂಜು ಮತ್ತು ಉಮೇದ್ ಪರಾರಿಯಾಗಿದ್ದಾರೆ. ಇವರಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಆರೋಪಿ ಸಚಿನ್ ಕೂಡ ಪೊಲೀಸರಿಂದ ತಪ್ಪಿಸಿಕೊಂಡು ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಈ ವೇಳೆ ಕಾಲು ಮುರಿದು ಗಾಯಗೊಂಡಿದ್ದರಿಂದ ಸಿಕ್ಕಿಬಿದ್ದಿದ್ದಾನೆ. ಗಾಯಾಳು ಸಚಿನ್‌ನನ್ನು ನಗರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾ ತರಿಸಿ, ಅಪಾರ್ಟ್‌ಮೆಂಟ್‌ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳಾಗಿ ಪ್ಯಾಕ್ ಮಾಡಿ ಮಾರುತ್ತಿದ್ದರು. ಈ ಪ್ಯಾಕೆಟ್‌ಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರ ತನಿಖೆ ವೇಳೆಯಲ್ಲಿ ತಿಳಿದುಬಂದಿದೆ.