ಖಾಂಡ್ವಾ: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವಯೋವೃದ್ದೆಯ ಮೇಲೆ ನಾಲ್ವರು ಮುಸುಕುಧಾರಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಅಮಾನುಷ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ಪ್ರಕಾರ, ಖಾಂಡ್ವಾ ಜಿಲ್ಲೆಯ ಕೇಂದ್ರದಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ಹಳ್ಳಿಯೊಂದರ ಹೊಲದಲ್ಲಿ ವೃದ್ದೆ ಒಂಟಿಯಾಗಿದ್ದರು. ಈ ವೇಳೆ ನಾಲ್ವರು ಮುಸುಕುಧಾರಿಗಳು ಆಕೆಯ ಮೇಲೆರಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಗಾಯಗೊಂಡಿದ್ದ ಸಂತ್ರಸ್ತೆ ಮರುದಿನ ಬೆಳಿಗ್ಗೆ ಸಮೀಪದ ಹಳ್ಳಿಯಲ್ಲಿ ವಾಸಿಸುವ ತನ್ನ ಪುತ್ರಿಗೆ ಈ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ಪುತ್ರಿ ತಾಯಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವೃದ್ಧೆ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗೆ ನೆರವಾಗುವ ಮಾಹಿತಿಯನ್ನು ನೀಡುವವರಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.