ಮಂಗಳೂರು: ಬಂಟ್ವಾಳದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಏಕಮುಖ ಪ್ರೀತಿಯನ್ನು ನಿರಾಕರಿಸಿದ್ದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ಹಾಡಹಗಲೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದಾನೆ. ಈ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ.
ಮೃತಳನ್ನು ಕಕ್ಕೆಪದವು ನಿವಾಸಿ ಹಾಗೂ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿ ಚೇತನ್, ಲಾವಣ್ಯಳ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಗುರುವಾರ ಸಂಜೆ ಸುಮಾರು 6 ಗಂಟೆಗೆ ಲಾವಣ್ಯ ಮನೆಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ, ಚೇತನ್ ಸ್ಥಳಕ್ಕೆ ಬಂದು ತನ್ನ ಬ್ಯಾಗ್‌ನಲ್ಲಿದ್ದ ಹರಿತವಾದ ಆಯುಧವನ್ನು ಹೊರತೆಗೆದಿದ್ದಾನೆ. ಇದನ್ನು ಗಮನಿಸಿದ ಲಾವಣ್ಯ ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಚೇತನ್ ಆಕೆಯನ್ನು ಬೆನ್ನಟ್ಟಿ ಬಸ್ ನಿಲ್ದಾಣದಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ತೀವ್ರ ರಕ್ತಸ್ರಾವಗೊಂಡ ಲಾವಣ್ಯಳನ್ನು ಸಾರ್ವಜನಿಕರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.