'ಸಹ ಆರೋಪಿಗೆ ಮಾಫಿ ಸಾಕ್ಷಿ ಆಕ್ಷೇಪಿಸುವ ಹಕ್ಕಿಲ್ಲ': 59ನೇ ಸೆಷನ್ಸ್ ಕೋರ್ಟ್ ಆದೇಶ ಎತ್ತಿಹಿಡಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠ!
ಬೆಂಗಳೂರು:
ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ (ಅಪ್ರೂವರ್) ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ತಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ವಿಚಾರಣಾ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿರಲಿಲ್ಲ ಎಂದು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಅರ್ಜಿಯಲ್ಲಿ ಯಾವುದೇ ಕರುಳಿಲ್ಲ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿ ಆದೇಶ ಹೊರಡಿಸಿದೆ.
ಹೈಕೋರ್ಟ್ ನೀಡಿದ ಪ್ರಮುಖ ಆದೇಶವೇನು?:
ವಿಚಾರಣೆ ವೇಳೆ ಹೈಕೋರ್ಟ್, ಸಾಕ್ಷಿಯನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಿದ್ದರೆ ಅದನ್ನು ನಂತರ ಪ್ರಶ್ನಿಸಬಹುದು. ಆದರೆ, ಇನ್ನೊಬ್ಬ ಆರೋಪಿಯನ್ನು 'ಮಾಫಿ ಸಾಕ್ಷಿ'ಯಾಗಿಸುವುದನ್ನು ಆಕ್ಷೇಪಿಸುವ ಕಾನೂನಾತ್ಮಕ ಹಕ್ಕು ಸಹ-ಆರೋಪಿಗಳಿಗೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿತು.
ಇದೇ ಮಾದರಿಯ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಇಂತಹ ಹಂತಗಳಲ್ಲಿ ನೈಸರ್ಗಿಕ ನ್ಯಾಯ ಸೂತ್ರ ಅನ್ವಯಿಸುವುದಿಲ್ಲ. ಪ್ರತಿಯೊಬ್ಬ ಸಹ-ಆರೋಪಿಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುತ್ತಾ ಹೋದರೆ ನ್ಯಾಯಾಂಗ ಪ್ರಕ್ರಿಯೆಯೇ ಪೂರ್ಣಗೊಳ್ಳುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರ ವಾದವನ್ನು ಪುರಸ್ಕರಿಸಲು ನಿರಾಕರಿಸಿತು.
ಏನಿದು ಅರ್ಜಿಯ ಹಿನ್ನೆಲೆ?:
ಪ್ರಕರಣದ 14ನೇ ಆರೋಪಿ ಪ್ರದೂಷ್ ಹಾಗೂ 10ನೇ ಆರೋಪಿ ವಿನಯ್, ತಮಗೆ ಕ್ಷಮಾದಾನ ನೀಡಿ 'ಅಪ್ರೂವರ್' (ಮಾಫಿ ಸಾಕ್ಷಿ) ಆಗಿ ಪರಿಗಣಿಸಿದರೆ ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡಬೇಕೆಂದು ದರ್ಶನ್ ಹಾಗೂ ಇತರ ಆರೋಪಿಗಳ ಪರ ವಕೀಲರು ಕೋರಿದ್ದರು. ಆದರೆ ಸೆಷನ್ಸ್ ನ್ಯಾಯಾಲಯ ಆಗಸ್ಟ್ 10 ರಂದು ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಮನವಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಕೆಯಾಗಿದ್ದು, ಪ್ರಸ್ತುತ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
