ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನೇಮಕ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಾದ್ಯಂತ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಪುನಾರಚನೆಯ ಭಾಗವಾಗಿ ಈ ನೇಮಕಾತಿ ನಡೆದಿದೆ.
‘ಸಂಘಟನ್ ಸೃಜನ್ ಅಭಿಯಾನ’ ಅಡಿಯಲ್ಲಿ ವೀಕ್ಷಕರ ವರದಿ, ಕಾರ್ಯಕರ್ತರು ಮತ್ತು ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಆಯ್ಕೆ ಮಾಡಲಾಗಿದೆ.
ಪದ್ಮರಾಜ್ ಆರ್. ಪೂಜಾರಿ ನ್ಯಾಯವಾದಿ, ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿ ಮತ್ತು ಮಂಗಳೂರು ದಸರಾ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಯುವ ಮತ್ತು ಹಿರಿಯ ಕಾರ್ಯಕರ್ತರನ್ನು ಒಗ್ಗೂಡಿಸುವ ಸಾಮರ್ಥ್ಯ ಹೊಂದಿದ್ದಾರೆ.
ಕರಾವಳಿಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಈ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
